ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ: ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ - ಸಿಎಂ ಸ್ಪಷ್ಟನೆ

ಬೆಂಗಳೂರು: ವಿಜಯಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ಕೊಟ್ಟಿರುವ ವಿಚಾರ ರಾಜಕೀಯ ಆಯಾಮ ಪಡೆದುಕೊಂಡು ವಿವಾದಕ್ಕೆ ಕಾರಣವಾಗಿದೆ. ವಕ್ಫ್ ಬೋರ್ಡ್ ನಡೆಯನ್ನು ಬಿಜೆಪಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿಯೇ ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿತ್ತು.
ಈಗಾಗಲೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಹಾಗಾಗಿ ಗುತ್ತಿಗೆಯಲ್ಲಿ ಶೇ. 4% ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ವಿಚಾರಕ್ಕೆ ಸಂಬಂದಿಸಿದಂತೆ ಮಾದ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು,
ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಅಲ್ಪಸಂಖ್ಯಾತರಿಂದ ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ, ಆದರೆ ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






