ಜೂನ್ 15ರವರೆಗೆ ರಾಜ್ಯದ ಈ ಭಾಗದಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆ; ಎಲ್ಲೆಲ್ಲಿ ರೆಡ್ ಅಲರ್ಟ್ ಗೊತ್ತಾ..?

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಈ ಅಕಾಲಿಕ ಮಳೆಯಿಂದ ಕೆಲವು ಕಡೆ ರೈತರಿಗೆ ಬಹಳ ಸಮಸ್ಯೆ ಆಗಿದೆ. ಅತೀಯಾದ ಮಳೆಯಿಂದ ರೈತರು ಬೆಳೆದ ಬೆಳೆಗೆ ಬಾರೀ ಹಾನಿಯಾಗಿದೆ. ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ?
ಜೂ.12: ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂ.13: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂ.14: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






