ಪ್ರತಾಪ್ ಸಿಂಹ, ಬಿಜೆಪಿಗೆ ಹಿನ್ನಡೆ: ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿತು. “ದಸರಾ ಉದ್ಘಾಟನೆ ವಿಷಯದಲ್ಲಿ ಅರ್ಜಿದಾರರ ಯಾವುದೇ ಹಕ್ಕು ಉಲ್ಲಂಘನೆ ಆಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.
ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸುತ್ತಾ, ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸುವುದು ಸರಿಯಲ್ಲ ಎಂದು ವಾದಿಸಿದರು. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ಭುವನೇಶ್ವರಿ ಹಾಗೂ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದಾಗಿ ವಕೀಲರು ಅಭಿಪ್ರಾಯಪಟ್ಟರು. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದರು.
ಆದರೆ ಈ ವಾದಕ್ಕೆ ಪ್ರತಿಕ್ರಿಯಿಸಿದ ಸಿಜೆ ವಿಭು ಬಖ್ರು, “ಈ ದೇಶದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವುದು ತಪ್ಪಲ್ಲ. ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ” ಎಂದು ಪ್ರಶ್ನಿಸಿದರು. ವ್ಯಕ್ತಿಯ ಆಸ್ತಿ ಕಿತ್ತುಕೊಂಡಿದ್ದರೆ ಅಥವಾ ಪೂಜಾರಿಯ ಪೂಜೆಯ ಹಕ್ಕು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ಆದರೆ ಈ ಪ್ರಕರಣದಲ್ಲಿ ಅಂತಹ ಹಕ್ಕು ಉಲ್ಲಂಘನೆ ಕಂಡುಬಂದಿಲ್ಲ ಎಂದು ಪೀಠ ಸ್ಪಷ್ಟಪಡಿಸಿತು.
ಪ್ರತಾಪ್ ಸಿಂಹ ಪರ ವಕೀಲರು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಸಂಪ್ರದಾಯವಿದೆ. ಆದರೆ ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ವಿರೋಧವಾಗಿದೆ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಶಿಷ್ಟಾಚಾರ ಪಾಲಿಸುವುದು ಬೇರೆ ವಿಚಾರ. ಆದರೆ ಇಲ್ಲಿ ಕಾನೂನಾತ್ಮಕ ಹಕ್ಕು ಉಲ್ಲಂಘನೆಯೇ ಮುಖ್ಯ” ಎಂದು ಅಭಿಪ್ರಾಯಪಟ್ಟಿತು.
ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್ ಕುಮಾರ್ ಹಾಗೂ ಹೆಚ್.ಎಸ್. ಗೌರವ್ ಕೂಡ ಪಿಐಎಲ್ ಸಲ್ಲಿಸಿದ್ದರು. ಅವುಗಳನ್ನೂ ಹೈಕೋರ್ಟ್ ವಜಾಗೊಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?