By Election 2024: ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ: ಇವಿಎಂ ಸೇರಲಿದೆ ಅಭ್ಯರ್ಥಿಗಳ ಭವಿಷ್ಯ!

ಬೆಂಗಳೂರು: ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಬಿರುಸುಗೊಂಡಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯತ್ತ ತಂಡೋಪತಂಡವಾಗಿ ಬರುತ್ತಿದ್ದಾರೆ. ಮತದಾರರಲ್ಲಿ ಬಹಳ ಉತ್ಸಾಹ ಕಂಡುಬರುತ್ತಿದ್ದು, ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಯಲಿದೆ. ಮತದಾನ ಹಿನ್ನೆಲೆ ಮತಗಟ್ಟೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಮಿನಿ ಸಮರದ ಅಖಾಡದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಇದ್ದಾರೆ. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ನ ಯಾಸೀರ್ ಪಠಾಣ್ ಮತ್ತು ಬಿಜೆಪಿಯ ಭರತ್ ಬೊಮ್ಮಾಯಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ.
ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಮತ್ತು ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಸಮರದಲ್ಲಿ ಒಟ್ಟು 45 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದು, ನವೆಂಬರ್ 23ರಂದು ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






