karnataka bandh: ಇಂದು ಕರ್ನಾಟಕ ಬಂದ್‌: ರಾಜ್ಯದಲ್ಲಿ ಹೇಗಿದೆ 'ಬಂದ್' ಬಿಸಿ

ಮಾರ್ಚ್ 22, 2025 - 10:17
 0  10
karnataka bandh: ಇಂದು ಕರ್ನಾಟಕ ಬಂದ್‌: ರಾಜ್ಯದಲ್ಲಿ ಹೇಗಿದೆ 'ಬಂದ್' ಬಿಸಿ

 

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇನ್ನು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ. ಶನಿವಾರ ಆಗಿರುವುದರಿಂದ ಸಂಚಾರ ದಟ್ಟಣೆ ತುಸು ಕಡಿಮೆ ಇದೆ.

ಬೆಂಗಳೂರಿನ ಹೆಬ್ಬಾಳ ದಿಂದ ಕೆಆರ್ ಪುರಂ ಭಾಗದ ಕಡೆ ಸಂಚರಿಸುವರರಿಗೆ ಹಾಗೂ ಇತರ ಪ್ರಮುಖ ಪ್ರದೇಶಗಳವರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಂದಿನಂತೆಯೇ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್, ಆಟೋ, ಓಲಾ, ಉಬರ್ ಸಂಚಾರ ನಡೆಸುತ್ತಿವೆ.

ದಾವಣಗೆರೆಯಲ್ಲಿ ಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್, ಆಟೋಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಅಹಿತಕರ ಘಟನೆ ನಡೆಯದಂತೆ ಅಲ್ಲಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಕೋಟೆ ನಾಡು ಚಿತ್ರದುರ್ಗದಲ್ಲಿಯೂ ಜನಜೀವನ ಎಂದಿನಂತೆಯೇ ಆರಂಭವಾಗಿದೆ. ಹೂವು, ಹಣ್ಣು, ಬೇಕರಿ, ಗೂಡಂಗಡಿ ವ್ಯಾಪಾರ ವಹಿವಾಟು ಆಟೋ, ಬಸ್ ಸಂಚಾರ ಮಾಮೂಲಿಯಾಗಿದೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ರಸ್ತೆಯಲ್ಲಿಯೇ ಮಲಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ನಡೆದಿದೆ.

ಮೈಸೂರು ಜಿಲ್ಲೆಯಲ್ಲಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ಸಂಚಾರ ಎಂದಿನಂತೆಯೇ ಇರಲಿದೆ. ಹೋಟೆಲ್ಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಾಗುತ್ತಿದೆ

ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕನ್ನಡಿಗರ ಮೇಲೆ ಹಲ್ಲೆಯಾದರೂ ಸರ್ಕಾರ ಮೌನವಾಗಿದೆ.

ಧಾರವಾಡದಲ್ಲಿ ಬಂದ್ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಎಂದಿನಂತೆಯೇ ಜನಜೀವನ, ವಾಹನ ಓಡಾಟ ಕಂಡುಬಂದಿದೆ. ಬೆಳಗಾವಿಯಲ್ಲಿ ಬಸ್ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಧಾರವಾಡದಲ್ಲಿ ಈಗಾಗಲೇ ಪ್ರತಿಭಟನೆಗಳು ನಡೆದಿವೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow