One Nation One Election: ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಪುಟದ ಒಪ್ಪಿಗೆ!

ನವದೆಹಲಿ: ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂಸತ್ತಿನಲ್ಲಿ ಶೀಘ್ರದಲ್ಲೇ ಈ ಮಸೂದೆಯನ್ನು ಮಂಡಿಸಲು ಯೋಜಿಸಲಾಗಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದ್ದು, ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಕಳೆದ ಲೋಕಸಭೆ ಚುನಾವಣೆಯ ವೇಳೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವುದು ಕೂಡ ಒಂದು ಅನ್ನೋದು ಗಮನಾರ್ಹವಾಗಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸೂಚಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?






