ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ - ಶಿಕ್ಷಕರ ನೇಮಕಾತಿಗೆ ಅಸ್ತು
ನವದೆಹಲಿ: ರಾಜ್ಯದ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಕಾನೂನು ಅಡೆತಡೆಗಳನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ನೇಮಕಾತಿಗೆ ಹಸಿರು ನಿಶಾನೆ ತೋರಿದೆ. ಇದರಿಂದ ನೇಮಕಾತಿಯ ನಿರೀಕ್ಷೆಯಲ್ಲಿ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳಿಗೆ ದೀಪಾವಳಿಯ ಸಂದರ್ಭದಲ್ಲಿ ಸಿಹಿ ಸುದ್ದಿ ದೊರಕಿದೆ.
ಈ ಸಂಬಂಧ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರನ್ನೊಳಗೊಂಡ ಪೀಠವು, ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.
ಈ ಆದೇಶವು ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ತಡೆ ನೀಡುವ ಪ್ರಯತ್ನವನ್ನು ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. "ನೇಮಕಾತಿಗೆ ಸಂಬಂಧಿಸಿದ ಯಾವುದೇ ಸೇವಾ ಆಕ್ಷೇಪಣೆಗಳಿದ್ದರೂ, ಅದನ್ನು ಬಗೆಹರಿಸಲು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಸೂಕ್ತ ವೇದಿಕೆಯಾಗಿದೆ" ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಸೇವಾ ವಿಷಯಗಳಿಗೆ ಸಂಬಂಧಿಸಿದ ರಿಟ್ ಅರ್ಜಿಗಳನ್ನು ಸಂವಿಧಾನದ 226ನೇ ವಿಧಿಯ ಅಡಿಯಲ್ಲಿ ಹೈಕೋರ್ಟ್‌ಗಳು ವಿಚಾರಣೆಗೆ ಸ್ವೀಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಮಹತ್ವದ ಸೂಚನೆ ನೀಡಿದೆ. ಅಲ್ಲದೆ, ನೇಮಕಾತಿ ಪ್ರಕ್ರಿಯೆಯು ಕೆಎಟಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ನಿರ್ದೇಶನ ನೀಡಿದೆ.
ಪ್ರಕರಣದ ಹಿನ್ನೆಲೆ ಏನು?
ಸಾರ್ವಜನಿಕ ಶಿಕ್ಷಣ ಇಲಾಖೆಯು 2022ರ ಮಾರ್ಚ್ 21ರಂದು 6ರಿಂದ 8ನೇ ತರಗತಿಗಳಿಗೆ 13,352 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಲಿಖಿತ ಪರೀಕ್ಷೆಯ ನಂತರ, 2022ರ ನವೆಂಬರ್ 18ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಯಿತು. ಈ ಹಂತದಲ್ಲಿ, ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಆದಾಯ ಪ್ರಮಾಣಪತ್ರವನ್ನು ಪರಿಗಣಿಸಿದ್ದು ವಿವಾದಕ್ಕೆ ಕಾರಣವಾಯಿತು.
ಅಧಿಸೂಚನೆಯಲ್ಲಿ ಈ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲದಿದ್ದರೂ, ಪತಿಯ ಆದಾಯವನ್ನೇ ಪರಿಗಣಿಸಿದ್ದರಿಂದ ಮೀಸಲಾತಿಯಿಂದ ವಂಚಿತರಾಗಿದ್ದೇವೆ ಎಂದು ಹಲವು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ವಿವಾಹಿತ ಮಹಿಳೆಯರ ತಂದೆಯ ಆದಾಯ ಪ್ರಮಾಣಪತ್ರವನ್ನು ಪರಿಗಣಿಸುವಂತೆ ಆದೇಶಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು.
ಇದರನ್ವಯ, ಸರ್ಕಾರವು 2023ರ ಮಾರ್ಚ್ 8ರಂದು ಪರಿಷ್ಕೃತ ಪಟ್ಟಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ, ಮೊದಲ ಪಟ್ಟಿಯಲ್ಲಿದ್ದ 451 ಅಭ್ಯರ್ಥಿಗಳು ಸ್ಥಾನ ಕಳೆದುಕೊಂಡಿದ್ದರು.ಇದರಿಂದ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಅಕ್ಟೋಬರ್ 13ರಂದು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುಮತಿ ನೀಡಿತ್ತು. ಅಲ್ಲದೆ, ತಮ್ಮ ಆಕ್ಷೇಪಣೆಗಳನ್ನು ಕೆಎಟಿ ಮುಂದೆ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿತ್ತು.
ನಿಮ್ಮ ಪ್ರತಿಕ್ರಿಯೆ ಏನು?