ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಅಬ್ಬರ: ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು: ಕರ್ನಾಟಕದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಮಳೆಯ ಅರ್ಭಟ ಇರುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಸಾಧ್ಯತೆ ಇದೆ. ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 13-15 ಕಿ.ಮೀ ಆಗಿರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?