ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಆರ್ಸಿಬಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒಪ್ಪಿಗೆ ನೀಡಲಾಗಿದೆ.
ನ್ಯಾ. ಮೈಕಲ್ ಡಿ. ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ಸಲ್ಲಿಸಿದ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದ್ದು, ಅದರ ಶಿಫಾರಸಿನಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ವರದಿಯಲ್ಲಿ ಕಾರ್ಯಕ್ರಮದ ಆಯೋಜಕರ ನಿರ್ಲಕ್ಷ್ಯ, ಪೊಲೀಸರು ತೋರಿದ ವೈಫಲ್ಯಕ್ಕೆ ಕಾರಣ ಎಂದು ಹೇಳಲಾಗಿದ್ದು, ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ಶಿಫಾರಸು ಮಾಡಲಾಗಿದೆ.
ಜೂನ್ 4 ರಂದು ನಡೆದ ವಿಜಯೋತ್ಸವಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಕ್ರೀಡಾಂಗಣದ 6 ಮತ್ತು 7ನೇ ಗೇಟುಗಳ ಬಳಿ ಉಂಟಾದ ತಳ್ಳಾಟದಿಂದ ಕಾಲ್ತುಳಿತ ಸಂಭವಿಸಿತು. ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






