ಡಿಕೆಶಿಗೆ ಹೆಚ್ಚು ಶಾಸಕರ ಬೆಂಬಲವಿಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಜುಲೈ 10, 2025 - 14:21
 0  10
ಡಿಕೆಶಿಗೆ ಹೆಚ್ಚು ಶಾಸಕರ ಬೆಂಬಲವಿಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಹೊರಬೀಳುತ್ತಿವೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುವ ಮುನ್ನವೇ,

 ಡಿಸಿಎಂ ಡಿಕೆಶಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರೊಂದಿಗೂ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಇಂದು ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲರನ್ನು ಸಿಎಂ ಮತ್ತು ಡಿಸಿಎಂ ಇಬ್ಬರೂ ಭೇಟಿ ಮಾಡಲಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಇದರ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕಾಂಕ್ಷಿ ಹೌದಾದರೂ ನಮ್ಮಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಆಡಳಿತ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದರು.

ಡಿಕೆ ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಹೌದು. ಆದರೆ ನಾನೇ 5 ವರ್ಷ ಅಧಿಕಾರ ಪೂರೈಸುವೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow