ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.
ಇದು ರಾಜಕಾರಣವಲ್ಲ ಎಂದರು. ಇದು ಹಿಂದೂಗಳನ್ನೇ ಗುರಿಯಾಗಿಸಿ ಮಾಡಿರುವ ಕೃತ್ಯ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದರು. ಗೋವಾ ಮಹದಾಯಿ ಯೋಜನೆಯನ್ನು ಹಾಗೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಬಿಜೆಪಿ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ತಿಳಿ ಹೇಳಬೇಕು ಎಂದರು.
ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು.
ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು.
ನಿಮ್ಮ ಪ್ರತಿಕ್ರಿಯೆ ಏನು?