ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ!
ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಿಮರೋಡಿ ಅವರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದ ವಿಡಿಯೋದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿ ನಿಂದಿಸಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ರಾಜೀವ್ ಕುಲಾಲ್ ಅವರ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಭಾರೀ ಹೈಡ್ರಾಮಾ ನಡೆಯಿತು. ಸುಮಾರು 30 ಮಂದಿ ಪೊಲೀಸರ ತಂಡ 8 ವಾಹನಗಳಲ್ಲಿ ಉಜಿರಿಯಲ್ಲಿರುವ ತಿಮರೋಡಿ ಅವರ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿತು.
ಬಂಧನದ ವೇಳೆ ತಿಮರೋಡಿ ಅವರ ಬೆಂಬಲಿಗರು ಮನೆ ಮುಂದೆ ಜಮಾಯಿಸಿ, ಬಂಧಿಸಬಾರದು ಎಂದು ಆಗ್ರಹಿಸಿದರು. "ಏನೇ ವಿಚಾರಣೆ ಬೇಕಾದರೂ ಇಲ್ಲೇ ನಡೆಸಬೇಕು" ಎಂದು ಪಟ್ಟು ಹಿಡಿದರು. ಈ ವೇಳೆ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
ನಿಮ್ಮ ಪ್ರತಿಕ್ರಿಯೆ ಏನು?