ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಆರ್ಭಟ; ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆಪ್ಟೆಂಬರ್ 30ರ ವೇಳೆಗೆ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಒಂದು ವಾರದ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.
ಮೀನುಗಾರರಿಗೆ ಎಚ್ಚರಿಕೆ
ಕರಾವಳಿಯಲ್ಲಿ ಇಂದು ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸುವುದರಿಂದ ಸಮುದ್ರ ಪ್ರಕ್ಷುಬ್ಧವಾಗಿರುತ್ತದೆ.
ಮಳೆ ಹೆಚ್ಚಾಗುವ ಜಿಲ್ಲೆಗಳು
ಬೆಂಗಳೂರು ಸೇರಿದಂತೆ ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತು ಸೋಮವಾರ ಹಗುರ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ.
ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿಮ್ಮ ಪ್ರತಿಕ್ರಿಯೆ ಏನು?