ಮೆಟ್ರೋ ದರ ಮತ್ತೆ ಇಳಿಕೆ ಆಗಲಿದೆ, ಚಿಂತೆ ಬೇಡ: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ಕೊಟ್ಟ ಸಿದ್ದರಾಮಯ್ಯ!

ಫೆಬ್ರವರಿ 13, 2025 - 12:05
 0  8
ಮೆಟ್ರೋ ದರ ಮತ್ತೆ ಇಳಿಕೆ ಆಗಲಿದೆ, ಚಿಂತೆ ಬೇಡ: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ಕೊಟ್ಟ ಸಿದ್ದರಾಮಯ್ಯ!

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋಗಿಂತ ಆಟೋ, ಬೈಕ್​ನಲ್ಲೇ ಹೋವುದು ಬೆಸ್ಟ್​ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇನ್ನು ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಮೆಟ್ರೋ ದರ ಏರಿಕೆ ಸಂಬಂಧ ಬಿಎಂಆರ್​ಸಿಎಲ್​ಗೆ ಮಹತ್ವದ ಸೂಚನೆ ನೀಡಿದ್ದಾರೆ.

ಬೆಂಗಳೂರು ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗಳಿಗೆ ಯಥೇಚ್ಚ ದರ ಏರಿಕೆಯಾಗಿದೆ. ಆ ದರವನ್ನು ಇಳಿಕೆ ಮಾಡುವಂತೆ  ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಟ್ವೀಟ್​ನಲ್ಲೇನಿದೆ?

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow