ಮೊದಲು ಡಿಕೆಶಿ AICC ಅಧ್ಯಕ್ಷರ ಹೆಸರು ದುರ್ಬಳಕೆ ಮಾಡುವುದು ನಿಲ್ಲಿಸಲಿ: DCMಗೆ ರಾಜಣ್ಣ ತಿರುಗೇಟು!

ಬೆಂಗಳೂರು:- ಮೊದಲು ಡಿಕೆಶಿ AICC ಅಧ್ಯಕ್ಷರ ಹೆಸರು ದುರ್ಬಳಕೆ ಮಾಡುವುದು ನಿಲ್ಲಿಸಲಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿಗಳಿಗೆ ಸಚಿವ ರಾಜಣ್ಣ ಅವರು ಟಾಂಗ್ ಕೊಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ನಾವು ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿದ್ದಾರೆ. ಈ ಮೂಲಕ ಕರ್ನಾಟಕ ಕಾಂಗ್ರೆಸ್ ಆಂತರಿಕ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಸುಳಿವು ದೊರೆತಿದೆ.
ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು. ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ, ವಾಸ್ತವ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ ಎಂದು ರಾಜಣ್ಣ ಖಡಕ್ ಆಗಿ ಹೇಳಿದರು.
50 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸತ್ಪರಿಣಾಮ ಬೀರುವಂಥ ಮಾತನಾಡುತ್ತೇನೆಯೇ ಹೊರತು ದುಷ್ಪರಿಣಾಮ ಬೀರುವಂತಹ ಮಾತುಗಳನ್ನು ಆಡುವುದಿಲ್ಲ. ನನಗೂ ಡಿಕೆ ಶಿವಕುಮಾರ್ಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರ ಬೇಧ ಇರಬಹುದು ಅಷ್ಟೆ. ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣ ಅಂದರೆ, ಅವರು ಮತ್ತೊಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಎಲ್ಲ ಮಾಡಿದ್ದೇವೆ. ವಿಚಾರ ಭೇದ ಅಷ್ಟೆ, ವೈಯುಕ್ತಿಕವಾಗಿ ಏನೂ ಇಲ್ಲ. ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದು ರಾಜಣ್ಣ ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






