ರಾಜ್ಯದಲ್ಲಿ ಭಾರಿ ಮಳೆ: ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಬೆಂಗಳೂರು: ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಸಣ್ಣ ಪ್ರಮಾಣದ ಮಳೆಯ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳ ಭಾಗಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚು ಇರಲಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಪ್ರದೇಶಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗಬಹುದು.
ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಅಥವಾ ಮೋಡ ಕವಿದ ವಾತಾವರಣ ಇರಬಹುದು.
ನಗರದ ಕೆಲ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಕಾರ ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ಬೆಂಗಳೂರಿನ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22ರಿಂದ 26 ಡಿಗ್ರಿ ಸೆಲ್ಸಿಯಸ್‌ನ ನಡುವೆ ಇರಲಿದೆ.
ನಿಮ್ಮ ಪ್ರತಿಕ್ರಿಯೆ ಏನು?