ರಾಜ್ಯದಲ್ಲಿ ಸೈಕ್ಲೋನ್ ಎಫೆಕ್ಟ್: 3 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ರೌದ್ರ ರೂಪ ತಾಳಿದ್ದು, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಈ ಬಾರಿಯ ಮಳೆ ಇನ್ನೂ ಹೆಚ್ಚು ಗಂಭೀರವಾಗಬಹುದು ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೇ ತಿಂಗಳಲ್ಲಿ ಆರಂಭವಾದ ಮುಂಗಾರು ಮಳೆ, ಕೆಲ ದಿನಗಳ ವಿರಾಮದ ಬಳಿಕ ಈಗ ಮತ್ತೆ ತೀವ್ರಗೊಳ್ಳುತ್ತಿದೆ. ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರೆದಿದೆ.
ಕೇಂದ್ರ ಹವಾಮಾನ ಇಲಾಖೆ, ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಸೈಕ್ಲೋನಿಕ್ ಪರಿಸ್ಥಿತಿಯ ಪರಿಣಾಮ ಕರ್ನಾಟಕದ ಮೇಲೆ ಬೀಳುವ ಸಾಧ್ಯತೆ ಇದೆ. ಮೀನುಗಾರರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದ್ದು, ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರಿಕೆಗೆ ನಿಷೇಧವಿದೆ.
ಬೆಂಗಳೂರಿನಲ್ಲೂ ಕಳೆದ ಕೆಲವು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಮಳೆಯಿಂದ ಸಂಚಾರ ವ್ಯವಸ್ಥೆ ಹಾಗೂ ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ವೇಳೆ, ಜನರು ಸುರಕ್ಷಿತವಾಗಿರಲು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






