ರೈತರಿಗೆ ಗುಡ್ ನ್ಯೂಸ್: ಸಿದ್ದರಾಮಯ್ಯ ಬಜೆಟ್ʼನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆ 16ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ದಾಟಿದೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟ್ನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಇನ್ನೂ ಈ ಬಾರಿಯ ಬಜೆಟ್ನಲ್ಲಿ ಕೃಷಿ ಮತ್ತು ತೋಟಗಾರಿಕೆ ವಲಯಕ್ಕೆ ಒಟ್ಟು ₹7145 ಕೋಟಿ ಅನುದಾನ ಮೀಸಲಿಟ್ಟಿದೆ. ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ.
ಹನಿ ಮತ್ತು ತುಂತುರು ನೀರಾವರಿಗೆ ₹440 ಕೋಟಿ
ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನವನ್ನು ಒದಗಿಸಲಾಗುವುದು.
ಕೃಷಿ ಭಾಗ್ಯ ಯೋಜನೆಯಡಿ 12,000 ಕೃಷಿ ಹೊಂಡ ನಿರ್ಮಿಸುವ ಗುರಿ
ಕೃಷಿ ಭಾಗ್ಯ ಯೋಜನೆಯಡಿ ಇದುವರೆಗೆ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳನ್ನು ನಿರ್ಮಿಸಿ ಮಳೆಯಾಶ್ರಿತ ಕೃಷಿ ಪ್ರದೇಶದ ಬೆಳೆಗಳಿಗೆ ರಕ್ಷಣಾತ್ಮಕ ನೀರಾವರಿ ಒದಗಿಸುವುದರೊಂದಿಗೆ ರೈತರ ಬೆಳೆಗಳ ಉತ್ಪಾದಕತೆ ಹಾಗೂ ಆದಾಯವನ್ನು ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 12,000 ಕೃಷಿ ಹೊಂಡಗಳನ್ನು ನಿರ್ಮಿಸಲಾಗುವುದು.
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ₹25 ಕೋಟಿ
ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಈಗಾಗಲೇ ಅನುಮೋದನೆ ನೀಡಿದ್ದು, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು.
ಕೃಷಿ ಕ್ಷೇತ್ರದಲ್ಲಿ AI ಅಳವಡಿಕೆ
ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಕೇಂದ್ರವು ರೈತರಿಗೆ ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನವನ್ನು ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
ತೊಗರಿ ಉತ್ಪಾದನೆಗೆ ₹88 ಕೋಟಿ
ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದೆ. ಈ ಮೂಲಕ ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಒದಗಿಸಲಾಗುವುದು.
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್ಕ್ಯೂಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು.
ನಿಮ್ಮ ಪ್ರತಿಕ್ರಿಯೆ ಏನು?






