ವಿಪಕ್ಷಗಳ ಆಕ್ರೋಶ ಬೆನ್ನಲ್ಲೇ ಸಿಎಂ ಗ್ರೀನ್ ಸಿಗ್ನಲ್: ಪ್ರತಿ ಕ್ಷೇತ್ರಕ್ಕೆ 25 ಕೋಟಿ ಅನುದಾನ!
ಬೆಂಗಳೂರು: ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಗೂ ವಿಪಕ್ಷ ಶಾಸಕರಿಗೂ ಅನುದಾನ ಬಿಡುಗಡೆ ಮಾಡಿದ್ದಾರೆ.
ಸಿಎಂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹25 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ ₹50 ಕೋಟಿ ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದರು. ಈ ನಿರ್ಧಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಧಿವೇಶನದಲ್ಲಿಯೂ ಈ ಬಗ್ಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಇದೀಗ ಸಮಾನತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ವಿಪಕ್ಷ ಶಾಸಕರಿಗೂ ಅನುದಾನ ಬಿಡುಗಡೆ ಮಾಡಲಾಗಿದೆ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ಅಡಿ ಬರೋ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ ಹಾಗೂ ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?