ಸರ್ಕಾರಿ ನೌಕರರು RSS ಚಟುವಟಿಕೆಯಲ್ಲಿ ಭಾಗವಹಿಸೋದನ್ನ ನಿಷೇಧಿಸಿ: CMಗೆ ಸಚಿವ ಖರ್ಗೆ ಮತ್ತೊಂದು ಪತ್ರ
ಬೆಂಗಳೂರು: ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಈ ಬಾರಿ ರಾಜ್ಯದ ಸರ್ಕಾರಿ ನೌಕರರು ಸಂಘದ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021”ರ ನಿಯಮ 5(1) ಅನ್ನು ಉಲ್ಲೇಖಿಸಿರುವ ಸಚಿವರು, ಯಾವುದೇ ಸರ್ಕಾರಿ ನೌಕರರು ರಾಜಕೀಯ ಪಕ್ಷಗಳು ಅಥವಾ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತಿಲ್ಲ ಎಂಬ ನಿಯಮ ಈಗಾಗಲೇ ಜಾರಿಯಲ್ಲಿದೆ ಎಂದು ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.
ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರು ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?