ಸಿಲಿಂಡರ್ ಸ್ಫೋಟ ದುರಂತ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 8ಕ್ಕೇರಿಕೆ

ಹುಬ್ಬಳ್ಳಿ: ಇಲ್ಲಿನ ಉಣಕಲ್ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪಸ್ವಾಮಿ ಮಾಲಾಧಾರಿ ಚಿಕಿತ್ಸೆಗೆ ಸ್ಪಂದಿಸದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಎಂಟಕ್ಕೇರಿದೆ.
ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಅವಘಡದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ. 25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಕಿಳಿದ್ದು, ಇನ್ನು ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಕಳೆದ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ಅಚ್ಚವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ, ಮಾಲಾಧಾರಿಗಳು ಮಲಗಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸಕಾಲದಲ್ಲಿ ಎಲ್ಲಾ ಮಾಲಾಧಾರಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮ್ಸ್ ನಿರ್ದೇಶಕ ಎಸ್.ಎಫ್. ಕಮ್ಮಾರ ನೇತೃತ್ವದ ತಂಡ ಗಾಯಾಳುಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?






